ಕವನ – ಹಸುರು
ಕವಿ – ಕುವೆಂಪು
ನವರಾತ್ರಿಯ ನವಧಾತ್ರಿಯ
ಈ ಶ್ಯಾಮಲ ವನಧಿಯಲಿ
ಹಸುರಾದುದೊ ಕವಿಯಾತ್ಮಂ
ರಸಪಾನ ಸ್ನಾನದಲಿ !
ಹಸುರಾಗಸ, ಹಸುರು ಮುಗಿಲು ;
ಹಸುರು ಗದ್ದೆಯಾ ಬಯಲು ;
ಹಸುರಿನ ಮಲೆ ; ಹಸುರು ಕಣಿವೆ ;
ಹಸುರು ಸಂಜೆಯೀ ಬಿಸಿಲೂ !
ಆಶ್ವೀಜದ ಶಾಲಿವನದ
ಗಿಳಿಯೆದೆ ಬಣ್ಣದ ನೋಟ ;
ಅದರೆಡೆಯಲಿ ಬನದಂಚಲಿ
ಕೊನೆವೆತ್ತಡಕೆಯ ತೋಟ !
ಅದೊ ಹುಲ್ಲಿನ ಮಕಮಲ್ಲಿನ
ಹೊಸ ಪಚ್ಚೆಯ ಜಮಖಾನೆ
ಪಸರಿಸಿ ತಿರೆ ಮೈ ಮುಚ್ಚಿರೆ
ಬೇರೆ ಬಣ್ಣವನೆ ಕಾಣೆ !
ಹೊಸ ಹೂವಿನ ಕಂಪು ಹಸುರು,
ಎಲರಿನ ತಂಪೂ ಹಸುರು !
ಹಕ್ಕಿಯ ಕೊರಲಿಂಪು ಹಸುರು ;
ಹಸುರು ಹಸುರಿಳೆಯುಸಿರೂ !
ಹಸುರತ್ತಲ್ ! ಹಸುರಿತ್ತಲ್ !
ಹಸುರೆತ್ತಲ್ ಕಡಲಿನಲಿ
ಹಸುರ್ಗಟ್ಟಿತೊ ಕವಿಯಾತ್ಮಂ
ಹಸುರ್ನೆತ್ತರ್ ಒಡಲಿನಲಿ !*
(*ಆಶ್ವೀಜಮಾಸದಲಿ ‘ಕವಿಶೈಲ”ದ ನೆತ್ತಿಯಲ್ಲಿ ದೊರೆಕೊಂಡ ರಸಾನುಭೂತಿ)
———————————————————