ರಚನೆ – ಕುವೆಂಪು
ಯಾವ ಜನ್ಮದ ಮೈತ್ರಿ ಈ ಜನ್ಮದಲಿ ಬಂದು
ನಮ್ಮಿಬ್ಬರನು ಮತ್ತೆ ಬಂಧಿಸಿಹುದೋ ಕಾಣೆ !
ಎಲ್ಲಿದ್ದರೇನಂತೆ ನಿನ್ನನೊಲಿಯದೆ ಮಾಣೆ,
ಗುರುದೇವನಾಣೆ, ಓ ನನ್ನ ನೆಚ್ಚಿನ ಬಂಧು!
ವಿಶ್ವ ಜೀವನವೊಂದು ಪಾರವಿಲ್ಲದ ಸಿಂಧು!
ಮೇಲೆ ತೆರೆನೊರೆಯೆದ್ದು ಭೋರ್ಗರೆಯುತಿರೆ ರೇಗಿ,
ಅದರಂತರಾಳದಲಿ ಗುಪ್ತಗಾಮಿನಿಯಾಗಿ;
ಹೃದಯಗಳು ನಲಿಯುತಿವೆ ಪ್ರೇಮ ತೀರ್ಥದಿ ಮಿಂದು!
ಅದರರ್ಥಗಿರ್ಥಗಳು ಸೃಷ್ಟಿಕರ್ತನಿಗಿರಲಿ;
ವ್ಯರ್ಥ ಜಿಜ್ಞಾಸೆಯಲಿ ಕಾಲಹರಣವದೇಕೆ?
ಕುರುಡನಾದಗೆ ದಾರಿಯರ್ಥ ತಿಳಿಯಲೆ ಬೇಕೆ?
ಹಾದಿ ಸಾಗಿದರಾಯ್ತು ಬರುವುದೆಲ್ಲಾ ಬರಲಿ!
ಬಾರಯ್ಯ, ಮಮಬಂಧು, ಜೀವನಪಥದೊಳಾವು
ಒಂದಾಗಿ ಮುಂದುವರಿಯುವ; ಹಿಂದಿರಲಿ ಸಾವು.
ಸೊಗಸಾದ ಹಾಡುಗಾರಿಕೆ. ಧನ್ಯವಾದಗಳು, ಮೇಡಮ್.