ಕವನ – ನಿಮ್ಮೊಡನಿದ್ದೂ ನಿಮ್ಮಂತಾಗದೆ
ಕವಿ – ಕೆ. ಎಸ್. ನಿಸಾರ್ ಅಹಮದ್
ನಿಮ್ಮೊಡನ್ದಿದೂ ನಿಮ್ಮಂತಾಗದೆ
ಜಗ್ಗಿದ ಕಡೆ ಬಾಗದೆ
ನಾನು ನಾನೇ ಆಗಿ, ಈ ನೆಲದಲ್ಲೆ ಬೇರೊತ್ತಿದರೂ ಬೀಗಿ
ಪರಕೀಯನಾಗಿ
ತಲೆಯೆತ್ತುವುದಿದೆ ನೋಡಿ
ಅದು ಬಲು ಕಷ್ಟದ ಕೆಲಸ.
ವೃತ್ತದಲ್ಲಿ ಉನ್ಮತ್ತರಾದ
ನಿಮ್ಮ ಕುಡಿತ ಕುಣಿತ ಕೂಟಗಳು ಕೆಣಕಿ
ಕುಣಿಕೆ ಎಸೆದ್ದಿದರೂ
ಪಂಚೇಂದ್ರಿಯಕ್ಕೆ ಲಗಾಮು ಜಡಿದು ಜಾರದೆ ನಿಮ್ಮತ್ತ
ಸಂಯಮವನ್ನೇ ಪೋಷಿಸಿ ಸಾಕುತ್ತ
ರೇಖೆಯಲ್ಲ್ಲೇ ದೊಂಬರಾಟ ನಡೆಸುವುದಿದೆ ನೋಡಿ
ಅದು ಬಲು ಕಷ್ಟದ ಕೆಲಸ.
ಒಳಗೊಳಗೇ ಬೇರು ಕೊಯ್ದು
ಲೋಕದೆದುರಲ್ಲಿ ನೀರು ಹೊಯ್ದು
ನನ್ನ ಸಲಹುವ ನಿಮ್ಮ ಕಪಟ ಗೊತ್ತಿದ್ದರೂ
ಗೊತ್ತ್ಲಿಲದಂತೆ ನಟಿಸಿ
ಚಕಾರವೆತ್ತದ ನಿಮ್ಮೊಡನೆ ಕಾಫಿ ಹೀರಿ ಪೇಪರೋದಿ ಹರಟಿ
ಬಾಳ ತಳ್ಳುವುದಿದೆ ನೋಡಿ
ಅದು ಬಲು ಕಷ್ಟದ ಕೆಲಸ.
ನಿಮ್ಮ ಮಾತುಕತೆಗಳಲ್ಲಿ ಹುದುಗಿದ ಬೆಕ್ಕು
ಸಂಶಯ ಪಂಜವೆತ್ತಿ
ನನ್ನ ನಂಬಿಕೆ ನೀಯತ್ತು ಹಕ್ಕು
ಕೊನೆಗೆ ಸಾಚಾತನವನ್ನು ಪರಚಿ, ಒತ್ತಿ
ನೋವಿಗೆ ಕಣ್ಣು ತುಂಬ್ದಿದರೂ,
ಚೆಲ್ಲಿದ ರಕ್ತದಲ್ಲಿ ರಾಷ್ಟ್ರೀಯತೆಯ ಧಾತುಗಳ
ನನ್ನೆದುರಿನಲ್ಲೇ ತನಿಖೆ ಮಾಡುವ ಕ್ಷಣವನ್ನ
ಹುಸಿನಗುತ್ತ ಎದುರಿಸುವುದಿದೆಯಲ್ಲ
ಅದು ಬಲು ಕಷ್ಟದ ಕೆಲಸ.
* * *
(ಸಂಜೆ ಐದರ ಮಳೆ ಸಂಕಲನದಿಂದ – ೧೯೭೦)
* * *